ಆರು ಬಾಳಿದರೇನು ಆರು ಬದುಕಿದರೇನು
ನಾರಾಯಣನ ಸ್ಮರಣೆ ನಮಗಿಲ್ಲದನಕ ॥ ಪ ॥
ಉಣ್ಣ ಬರದವರಲ್ಲಿ ಊರೂಟವಾದರೇನು
ಹಣ್ಣು ಬಿಡದ ಮರಗಳು ಹಾಳಾದರೇನು
ಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನು
ಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು ॥ 1 ॥
ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನು
ಹೊಕ್ಕು ನಡೆಯದ ನಂಟತನದೊಳೇನು
ರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನು
ಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು ॥ 2 ॥
ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನು
ಬಲ್ಪಂಥವಿಲ್ಲದವನ ಬಾಳ್ವೆಯೇನು
ಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನ
ಸ್ವಲ್ಪವೂ ನೆನೆಯದ ನರನಿದ್ದರೇನು ॥ 3 ॥
*****
ರಾಗ ಖರಹರಪ್ರಿಯ ಆದಿತಾಳ (raga tala may differ in audio)
No comments:
Post a Comment